ಬೆಂಗಳೂರು : ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಧಾಳಿ ನಡೆಸಿರುವುನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ತೀವ್ರವಾಗಿ ಖಂಡಿಸುತ್ತದೆ.
ಪರಿಶಿಷ್ಟ ಜಾತಿ ಸಮುದಾಯಗಳ ನಡುವೆ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿದ್ದ ಹೋರಾಟಗಾರರ ಜೊತೆ ಸರಕಾರ ಮಾತುಕತೆ ನಡೆಸಿ ಸದಾಶಿವ ಆಯೋಗದ ವರದಿಯ ಕುರಿತು ಸರಕಾರದ ಅಭಿಪ್ರಾಯವೇನೆಂದು ಪ್ರಕಟಿಸುವ ಬದಲು ಹೋರಾಟ ನಿರತರ ಮೇಲೆ ಪೊಲೀಸರು ಲಾಠಿ ಪ್ರಯೋಗಿಸುವ ಮೂಲಕ ದೌರ್ಜನ್ಯ ನಡೆಸಿರುವುದನ್ನು ಸಿಪಿಐ(ಎಂ) ಪಕ್ಷ ಬಲವಾಗಿ ಖಂಡಿಸುತ್ತದೆ. ತಕ್ಷಣವೇ ಬಂಧಿತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಮತ್ತು ಗಾಯಾಳುಗಳಿಗೆ ಸೂಕ್ತ ಪರಿಹಾರ ಮತ್ತು ಉಚಿತ ಆರೋಗ್ಯ ಸೇವೆಯನ್ನು ನೀಡಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ.
ಪರಿಶಿಷ್ಟ ಜಾತಿ ಸಮುದಾಯದ ಮೀಸಲಾತಿಯಲ್ಲಿ ಹಿಂದುಳಿದಿರುವಿಕೆಯ ಕಾರಣದಿಂದ ವಂಚನೆಗೊಳಗಾದವರಿಗೆ ಒಳ ಮೀಸಲಾತಿ ನೀಡಬೇಕೆಂಬ ಒತ್ತಾಯ ಹಲವಾರು ವರ್ಷಗಳಿಂದ ಕೇಳಿ ಬರುತ್ತಿದೆ. ಈ ಕುರಿತಂತೆ ನ್ಯಾ. ಎ ಜೆ ಸದಾಶಿವ ಆಯೋಗವು ತನ್ನ ವರದಿಯನ್ನು ನೀಡಿ ಹಲವು ವರ್ಷಗಳೇ ಕಳೆದಿವೆ. ಇದುವರೆಗೆ ರಾಜ್ಯ ಸರಕಾರ ಆ ವರದಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿಲ್ಲ ಮತ್ತು ಸರಕಾರ ಆ ಕುರಿತು ತನ್ನ ನಿಲುಮೆ ಏನೆಂದು ಪ್ರಕಟಿಸದಿರುವುದು ಅಕ್ಷಮ್ಯವಾಗಿದೆ. ಈ ಕೂಡಲೇ ಸದಾಶಿವ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು ಮತ್ತು ಸರಕಾರ ಆ ಕುರಿತು ತನ್ನ ನಿಲುಮೆ ಏನೆಂಬುದನ್ನು ಪ್ರಕಟಿಸಬೇಕೆಂದು ಸಿಪಿಐ(ಎಂ) ಪಕ್ಷದ ಒತ್ತಾಯವಾಗಿದೆ.
ಒಳ ಮೀಸಲಾತಿಗಾಗಿ ಹೋರಾಟದಲ್ಲಿ ತೊಡಗಿರುವವರ ಮೇಲೆ ಪೊಲೀಸರು ದಾಳಿ ಮಾಡುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುವ ಮೂಲಕ ಸರಕಾರ ಕ್ರಮ ಒಳ ಮೀಸಲಾತಿಯನ್ನು ವಿರೋಧಿಸುವ ಇಂಗಿತ ವ್ಯಕ್ತಪಡಿಸಿದೆಯೇ ಎಂಬುದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕೆಂದು ಸಿಪಿಐ(ಎಂ) ಪಕ್ಷದ ಪ್ರಶ್ನೆಯಾಗಿದೆ.
ಯು. ಬಸವರಾಜ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ